ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಜೂನ್ 1 ರೊಳಗೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಎನ್ ಎಚ್ ಕೋನರಡ್ಡಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು 10,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಈಗಾಗಲೇ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಕಾಲಮಿತಿಯಲ್ಲಿ ಶಿಕ್ಷಕರ ನೇಮಕಾತಿ ಆಗಲಿದೆ ಎಂದರು.ಕಳೆದ 2016 ರ ಜನವರಿ 1 ರಿಂದ 2020 ರ ಡಿಸೆಂಬರ್ 31 ರವರೆಗೆ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿ,ನಿಧನ,ರಾಜೀನಾಮೆ ಮತ್ತು ಇತರ ಕಾರಣಗಳಿಂದ ತೆರವಾದ ಹುದ್ದೆಗಳನ್ನ ಭರ್ತಿ ಮಾಡುವ ಪ್ರಕ್ರಿಯೆಯನ್ನು ಆನ್‌ಲೈನ್ ಮೂಲಕ ನಡೆಸಲಾಗಿದೆ.
ಪದವಿ ಪೂರ್ವ ಕಾಲೇಜುಗಳಲ್ಲಿ 2015 ರ ಡಿಸೆಂಬರ್ 31 ರ ಪೂರ್ವದಲ್ಲಿ ಅನುದಾನಿತ ಖಾಸಗಿ ಪದವಿ ಪೂರ್ವ ಕಾಲೇಜುಗಳಲ್ಲಿ ತೆರವಾಗಿದ್ದ 1033 ಬೋಧಕ ಹುದ್ದೆಗಳನ್ನ ಭರ್ತಿ ಮಾಡಲು ಅವಕಾಶ ಕಲ್ಪಿಸಿದ್ದು, ಈ ಪೈಕಿ 468 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಲಾಗಿದೆ ಎಂದು ಹೇಳಿದರು.
ಖಾಸಗಿ ಅನುದಾನಿತ ಪ್ರೌಢಶಾಲೆಗಳಿಗೆ ಸಂಬಂಧಿಸಿದಂತೆ ಆನ್‌ಲೈನ್ ಮೂಲಕ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಸಂಬಂಧಿಸಿದ ಶಾಲಾ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ.
ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ ಖಾಲಿಯಾದ ಅನುದಾನಿತ ಶಿಕ್ಷಕರ ಹುದ್ದೆಯನ್ನು ಹೆಚ್ಚುವರಿ ಶಿಕ್ಷಕ ಹುದ್ದೆಯಿಂದ ತುಂಬಿಕೊಳ್ಳಲು ಅವಕಾಶವಿದೆ. ನೇರ ನೇಮಕಾತಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು. 1994-95ರ ಪ್ರಾರಂಭವಾದ ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ನಿಯಮದಲ್ಲಿ ಅವಕಾಶವಿಲ್ಲ. 1994-95ರ ನಂತರ ಅನುದಾನಿತ ಶಾಲೆ, ಶಾಲಾ ಕಾಲೇಜುಗಳ ಸಂಖ್ಯೆ 7,657 ಇದೆ ಎಂದು ಮಾಹಿತಿ ನೀಡಿದರು.